ಲಕ್ನೋ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಝಿಕಾ ವೈರಸ್ ಪ್ರಕರಣಗಳು ಏರಿಕೆಯಾಗುತ್ತಿದ್ದು, ಈವರೆಗೆ 79 ಪ್ರಕರಣಗಳು ದಾಖಲಾಗಿವೆ. ಈ ಹಿನ್ನಲೆ ಇಂದು ಸಿಎಂ ಯೋಗಿ ಆದಿತ್ಯನಾಥ್ ಆರೋಗ್ಯ ಅಧಿಕಾರಿಗಳ ಜೊತೆ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ.
ಸಭೆಯಲ್ಲಿ ಸೋಂಕಿನ ಹರಡುವಿಕೆಯನ್ನ ತಡೆಯಲು ಅನುಸರಿಸಬೇಕಾದ ಕ್ರಮಗಳ ಕುರಿತು ಚರ್ಚಿಸಿದ್ದಾರೆ. ಸದ್ಯ ನಿನ್ನೆ ಒಂದೇ ದಿನ ಕಾನ್ಪುರದಲ್ಲಿ 13 ಹೊಸ ಝೀಕಾ ವೈರಸ್ ಪ್ರಕರಣಗಳು ದಾಖಲಾಗಿವೆ. ಪ್ರತಿನಿತ್ಯ ಸೋಂಕಿನ ಪ್ರಮಾಣ ಏರಿಕೆಯಾಗುತ್ತಿರುವುದರಿಂದ ಆರೋಗ್ಯ ಇಲಾಖೆಯು ಸಹ ಪ್ರತಿ ಮನೆಗೆ ತೆರಳಿ ಆರೋಗ್ಯ ತಪಾಸಣೆ ಮಾಡುತ್ತಿದೆ. ಜೊತೆಗೆ, ಮುನ್ನೆಚ್ಚರಿಕಾ ಕ್ರಮಗಳನ್ನ ತೆಗೆದುಕೊಳ್ಳುವಂತೆ ಜಾಗೃತಿ ಮೂಡಿಸುತ್ತಿದೆ.
ಇನ್ನು ಮಹಾರಾಷ್ಟ್ರದಲ್ಲಿ ಆಗಸ್ಟ್ ತಿಂಗಳಿನಲ್ಲಿ ಮೊದಲ ಝೀಕಾ ಸೋಂಕಿನ ಪ್ರಕರಣ ವರದಿಯಾಗಿತ್ತು. ಇದನ್ನು ಹೊರತು ಪಡಿಸಿದರೇ ಈ ವರ್ಷ ಕೇರಳದಲ್ಲಿ ಮಾತ್ರ ಝೀಕಾ ವೈರಸ್ ಸೋಂಕು ಪತ್ತೆಯಾಗಿತ್ತು. ಉತ್ತರ ಪ್ರದೇಶದಲ್ಲಿ ಝೀಕಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರೋ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದ್ದು, ಎಚ್ಚರಿಕೆ ವಹಿಸಲು ಸೂಚನೆ ನೀಡಲಾಗಿದೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post