ಬೆಂಗಳೂರು: ಈ ಬಾರಿ ಚುನಾವಣೆಯಲ್ಲಿ ಯಾರೇ ಆದರೂ ಒಬ್ಬರಿಗೆ ಒಂದೇ ಟಿಕೆಟ್ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗೆ ಡಿ.ಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಅರ್ಜಿ ಸಲ್ಲಿಕೆ ನಂತರ ಆಕಾಂಕ್ಷಿಗಳು ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ನಿಮ್ಮ ಮನೆಗೆ ಭೇಟಿ ನೀಡುತ್ತಿರುವುದರಿಂದ ತೊಂದರೆ ಆಗುವುದಿಲ್ಲವೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಯಾರೇ ಆಗಲಿ ಒಬ್ಬರಿಗೆ ಒಂದೇ ಟಿಕೆಟ್. ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಇಲ್ಲಿ ವ್ಯಕ್ತಿ ಮುಖ್ಯವಲ್ಲ, ಪಕ್ಷ ಮುಖ್ಯ. ಪಕ್ಷ ಮೊದಲು ಅಧಿಕಾರಕ್ಕೆ ಬರಬೇಕು. ಅಧಿಕಾರಕ್ಕೆ ಬಂದಾಗ ಎಲ್ಲರಿಗೂ ಅಧಿಕಾರ ಸಿಗುತ್ತದೆ. ಎಲ್ಲರಿಗೂ ಅವರದೇ ಆದ ಶಕ್ತಿ ಇರುತ್ತದೆ. ಯಾರ ಶಕ್ತಿ ಎಷ್ಟಿದೆ ಎಂದು ಹೇಳಲು ಸಾಧ್ಯವಿಲ್ಲ. ಒಬ್ಬರಿಗೆ 100 ಬೂತ್ ನಿಭಾಯಿಸುವ ಶಕ್ತಿ ಇದ್ದರೆ, ಮತ್ತೆ ಕೆಲವರಿಗೆ 50, ಇನ್ನೂ ಕೆಲವರಿಗೆ 10 ಬೂತ್ ನಿಭಾಯಿಸುವ ಶಕ್ತಿ ಇರುತ್ತದೆ ಎಂದರು.
ಇದೇ ವೇಳ ಅರ್ಜಿ ಸಲ್ಲಿಸೋ ವೇಳೆ ಆಕಾಂಕ್ಷಿಗಳಿಂದ ಸಂಗ್ರಹಿಸುತ್ತಿರುವ ದೇಣಿಗೆ ಕುರಿತಂತೆ ಪ್ರತಿಕ್ರಿಯೆ ನೀಡಿ, ಇದು ನಮ್ಮ ಪಕ್ಷದಲ್ಲಿ ಹೊಸತಲ್ಲ. ಈ ಹಿಂದೆಯೂ ಪಕ್ಷಕ್ಕೆ ದೇಣಿಗೆ ನೀಡಿದ್ದಾರೆ. ಆಗ ಹೆಚ್ಚು ಸುದ್ದಿ ಆಗಿರಲಿಲ್ಲ. ಆದರೆ ಈ ಬಾರಿ ಆಗಿದೆ. ಚುನಾವಣಾ ತಯಾರಿ, ಜಿಲ್ಲೆ ಹಾಗೂ ಬ್ಲಾಕ್ ಮಟ್ಟದಲ್ಲಿ ಕಾಂಗ್ರೆಸ್ ಕಚೇರಿ ನಿರ್ಮಾಣ ಸೇರಿದಂತೆ ಹಲವು ವಿಚಾರವಾಗಿ ಆರ್ಥಿಕ ಶಕ್ತಿ ಅಗತ್ಯವಿದೆ. ಕಚೇರಿ ನಿರ್ಮಾಣಕ್ಕೆ ಕಾರ್ಯಕರ್ತರು ಆರ್ಥಿಕ ನೆರವು ಕೇಳಿದಾಗ ನಾವು ಹಣ ಸಹಾಯ ಮಾಡುತ್ತೇವೆ. ಕಾರ್ಯಕರ್ತರಿಗೆ ತೊಂದರೆ ಆದಾಗ ಅವರಿಗೆ ಸಹಾಯ ಮಾಡಲು ಹಣದ ಅಗತ್ಯವಿದೆ. ಹೀಗಾಗಿ ದೇಣಿಗೆಯನ್ನು ಸಂಗ್ರಹಿಸಲಾಗಿದೆ. ಇಂದಿನ ಸಭೆಯಲ್ಲಿ ಯಾವುದೇ ಚರ್ಚೆ ಇರುವುದಿಲ್ಲ. ನಮ್ಮ ನಾಯಕರಿಗೆ ಕೆಲವು ಮಾರ್ಗದರ್ಶನ ನೀಡಲಾಗುವುದು ಅಷ್ಟೇ ಎಂದು ತಿಳಿಸಿದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post