/newsfirstlive-kannada/media/post_attachments/wp-content/uploads/2024/12/MND_MAHESH_JOSHI.jpg)
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಕ್ಕರೆನಾಡಿನಲ್ಲಿ ಅದ್ಧೂರಿಯಾಗಿ ನಡೆಯುತ್ತಿದ್ದು ಇಂದು ಕೊನೆ ದಿನವಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಸಮ್ಮೇಳನಕ್ಕೆ ಭಾರೀ ಪ್ರಮಾಣದಲ್ಲಿ ಜನ ಸೇರುವ ಸಾಧ್ಯತೆ ಇದೆ. ಇನ್ನು ಮುಂದಿನ ಅಂದರೆ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಗಣಿನಾಡು ಬಳ್ಳಾರಿಯಲ್ಲಿ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ ಹೇಳಿದ್ದಾರೆ.
ಮುಂದಿನ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕುರಿತು ಮಾತನಾಡಿದ ಅಧ್ಯಕ್ಷ ಮಹೇಶ್ ಜೋಶಿ ಅವರು, ಮುಂದಿನ ವರ್ಷ ನುಡಿಜಾತ್ರೆ ಬಳ್ಳಾರಿಯಲ್ಲಿ ನಡೆಯಲಿದೆ. ಇದುವರೆಗೆ ಬಳ್ಳಾರಿಯಲ್ಲಿ 4 ಸಮ್ಮೇಳನಗಳು ನಡೆದಿದ್ದು 67 ವರ್ಷಗಳ ಬಳಿಕ 5ನೇ ಸಮ್ಮೇಳನ ನಡೆಯಲಿದೆ. ನಿನ್ನೆ ಸಭೆಯಲ್ಲಿ ಈ ಬಗ್ಗೆ ಒಮ್ಮತದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬಳ್ಳಾರಿಯಲ್ಲಿ ಸಮ್ಮೇಳನ ಮಾಡಲು ಕಾರ್ಯಕಾರಿ ಸಮಿತಿ ಸರ್ವಾನುಮತದಿಂದ ಒಪ್ಪಿಗೆ ನೀಡಿದೆ ಎಂದು ಮಹೇಶ್ ಜೋಶಿ ತಿಳಿಸಿದ್ದಾರೆ.
ಇದನ್ನೂ ಓದಿ:ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಇಂದು ಸಮಾರೋಪ.. ಬಳ್ಳಾರಿಯಲ್ಲಿ ಮುಂದಿನ ನುಡಿ ಜಾತ್ರೆ!
ಮಂಡ್ಯದ ಜನರು 87ನೇ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಗೊಳಿಸಿದ್ದಾರೆ. ಸಮಾರಂಭದಲ್ಲಿ ಸಾಕಷ್ಟು ವಿಶೇಷ ಗೋಷ್ಠಿಗಳನ್ನು ಆಯೋಜಿಸಲಾಗಿತ್ತು. ಎಲ್ಲವೂ ಜನರ ಗಮನ ಸೆಳೆದಿವೆ. ಇದೇ ಮೊದಲ ಬಾರಿಗೆ ಆಯೋಜಿಸಿದ್ದ ವಿಶೇಷ ಚೇತನರ ಗೋಷ್ಠಿ ಯಶಸ್ವಿ ಆಗಿದೆ. ದಾಖಲೆ ಮಟ್ಟದಲ್ಲಿ ಜನ ಕನ್ನಡ ಹಬ್ಬಕ್ಕೆ ಬಂದು ಯಶಸ್ವಿಗೊಳಿಸಿದ್ದಾರೆ. ಸಾಹಿತ್ಯದಲ್ಲಿ ರಾಜಕೀಯ, ರಾಜಕೀಯದಲ್ಲಿ ಸಾಹಿತ್ಯ ಎಂಬ ಹೊಸ ಚಿಂತನೆಗೆ ಶ್ಲಾಘನೆ ಸಿಕ್ಕಿದೆ ಎಂದರು.
ಆದಿಚುಂಚನಗಿರಿ ಪೀಠಾಧ್ಯಕ್ಷ ನಿರ್ಮಲಾನಂದ ಸ್ವಾಮೀಜಿ ಸಾನಿಧ್ಯದಲ್ಲಿ ಸಂಜೆ 4.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ. ಈ ಸಮಾರೋಪ ಸಮಾರಂಭದ ಕಡೆಯಲ್ಲಿ ಸಮ್ಮೇಳನದ ನಿರ್ಣಯ ಮಂಡನೆ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಸೇರಿದಂತೆ ಹಲವು ಸಚಿವರು, ಶಾಸಕರು ಭಾಗಿಯಾಗಲಿದ್ದಾರೆ. ಸಮ್ಮೇಳನಾಧ್ಯಕ್ಷ ನಾಡೋಜ ಡಾ.ಗೊ.ರು ಚನ್ನಬಸಪ್ಪ, ಕಸಾಪ ಅಧ್ಯಕ್ಷ ಡಾ.ಮಹೇಶ್ ಜೋಶಿ ಉಪಸ್ಥಿತಿ ಇರಲಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ