/newsfirstlive-kannada/media/post_attachments/wp-content/uploads/2024/10/SIDDARAMAIAH_WIFE_1.jpg)
ಕ್ಲೀನ್ ಹ್ಯಾಂಡ್ ಎಂದೇ ಕರೆಸಿಕೊಳ್ಳುವ ಸಿಎಂ ಸಿದ್ದರಾಮಯ್ಯಗೆ ಮುಡಾ ಪ್ರಕರಣ ಕಪ್ಪುಚುಕ್ಕೆಯಾಗಿ ಪರಿಣಮಿಸಿದೆ. ದಿನದಿಂದ ದಿನಕ್ಕೆ ಮುಡಾ ಕೇಸ್ ವಿಚಿತ್ರ ತಿರುವು ತೆಗೆದುಕೊಳ್ಳುತ್ತಿದೆ. ಒಂದೆಡೆ ಜಾರಿ ನಿರ್ದೇಶನಾಲಯ ಸಿಎಂ ಸಿದ್ದರಾಮಯ್ಯ ಹಾಗೂ ಇತರರ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಿದ್ದರೆ, ಇತ್ತ ಸಿಎಂ ಸಿದ್ದರಾಮಯ್ಯನವರ ಪತ್ನಿ ಅಚ್ಚರಿಯ ನಿರ್ಧಾರ ತೆಗೆದುಕೊಂಡು, ಇಡೀ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ನೀಡಿದ್ದಾರೆ.
ಮೊದಲ ಬಾರಿಗೆ ಪತ್ರ ಬರೆದ ಸಿಎಂ ಪತ್ನಿ ಪಾರ್ವತಿ
ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಕೇಳಿ ಬಂದಿರುವ ಗಂಭೀರ ಆರೋಪಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಪ್ರಕರಣದ ನಂತರ ಮೊದಲ ಬಾರಿಗೆ ಸಿದ್ದರಾಮಯ್ಯ ಪತ್ನಿ ಪಾರ್ವತಿ ಬಹಿರಂಗ ಪತ್ರ ಬರೆದಿದ್ದಾರೆ. ಮುಡಾಗೆ ಪತ್ರ ಬರೆದಿರುವ ಸಿಎಂ ಪತ್ನಿ ನಿವೇಶನಗಳನ್ನು ಹಿಂದಿರುಗಿಸುವುದಾಗಿ ತಿಳಿಸಿದ್ದಾರೆ. ಹಾಗಾದ್ರೆ ಸಿಎಂ ಪತ್ನಿ ಬರೆದಿರುವ ಪತ್ರದಲ್ಲಿ ಏನಿದೆ?.
ಇದನ್ನೂ ಓದಿ:ಹಿರಿಯ ನಟ ಮಿಥುನ್ ಚಕ್ರವರ್ತಿಗೆ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ
ಸಿಎಂ ಪತ್ನಿ ಪತ್ರದಲ್ಲಿ ಏನಿದೆ..?
ನನ್ನ ಪತಿಯಾಗಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ 40 ವರ್ಷದ ಸುದೀರ್ಘ ರಾಜಕಾರಣದಲ್ಲಿ ಯಾವುದೇ ಸಣ್ಣ ಕಳಂಕ ಅಂಟಿಕೊಳ್ಳದಂತ ನೈತಿಕತೆಯನ್ನು ವ್ರತದಂತೆ ಪಾಲಿಸಿಕೊಂಡು ಬಂದವರು. ರಾಜಕೀಯವೂ ಸೇರಿದಂತೆ ಸಾರ್ವಜನಿಕ ಜೀವನದಲ್ಲಿ ಕಾಣಿಸಿಕೊಂಡು ಅವರಿಗೆ ಮುಜುಗರ ಉಂಟು ಮಾಡಬಾರದು ಎಂಬ ನಿರ್ಧಾರಕ್ಕೆ ಬದ್ಧಳಾಗಿ ಬದುಕಿದವಳು. ನಾನೆಂದೂ ಮನೆ, ಆಸ್ತಿ, ಚಿನ್ನ, ಸಂಪತ್ತನ್ನು ಬಯಸಿದವಳಲ್ಲ. ಯಾವುದೇ ಕಾರಣಕ್ಕೂ ನನ್ನಿಂದ ಅವರ ರಾಜಕೀಯ ಜೀವನಕ್ಕೆ ಒಂದು ಸಣ್ಣ ಹನಿಯಷ್ಟೂ ಕಳಂಕ ತಟ್ಟಬಾರದೆಂದು ಎಚ್ಚರಿಕೆಯಿಂದ ನಡೆದುಕೊಂಡವಳು. ನನ್ನ ಪತಿಗೆ ರಾಜ್ಯದ ಜನತೆ ಹರಿಸುತ್ತಾ ಬಂದ ಪ್ರೀತಿ ಅಭಿಮಾನಗಳನ್ನು ದೂರದಿಂದಲೇ ಕಂಡು ಸಂತೋಷ ಮತ್ತು ಹೆಮ್ಮೆ ಪಟ್ಟವಳು. ಹೀಗಿದ್ದರೂ ಮೈಸೂರಿನ ಮುಡಾ ನಿವೇಶನಕ್ಕೆ ಸಂಬಂಧಿಸಿದಂತೆ ಕೇಳಿ ಬಂದ ಆರೋಪಗಳಿಂದ ನಾನು ಘಾಸಿಗೊಂಡಿದ್ದೇನೆ. ನನ್ನ ಸ್ವಂತ ಸೋದರ ಅರಿಶಿನ ಕುಂಕುಮದ ಭಾಗವಾಗಿ ಕೊಟ್ಟ ಜಮೀನಿನ ಬಾಬ್ತು ಪಡೆದ ನಿವೇಶನಗಳು ಇಷ್ಟೊಂದು ರಾದ್ಧಾಂತವಾಗುತ್ತದೆ. ಇದರಿಂದ ನನ್ನ ಪತಿಯವರು ಅನ್ಯಾಯವಾಗಿ ಆರೋಪಗಳನ್ನು ಎದುರಿಸುವಂತಾಗಬಹುದು ಎನ್ನುವುದನ್ನು ನಾನು ಊಹಿಸಿದವಳೂ ಅಲ್ಲ. ನನಗೆ ಈ ನಿವೇಶನ, ಮನೆ, ಆಸ್ತಿ, ಸಂಪತ್ತು ಯಾವುದೂ ಕೂಡ ನನ್ನ ಪತಿಯ ಗೌರವ, ಘನತೆ, ಮರ್ಯಾದೆ ಮತ್ತು ಅವರ ನೆಮ್ಮದಿಗಿಂತ ದೊಡ್ಡದಲ್ಲ. ಇಷ್ಟು ವರ್ಷಗಳ ಕಾಲ ಅಧಿಕಾರದಲ್ಲಿದ್ದ ಅವರಿಂದ ಏನನ್ನೂ ನನಗಾಗಲೀ, ನನ್ನ ಕುಟುಂಬಕ್ಕಾಗಲೀ ಬಯಸದೇ ಇದ್ದ ನನಗೆ ಈ ನಿವೇಶನಗಳು ತೃಣಕ್ಕೆ ಸಮ. ಈ ಹಿನ್ನೆಲೆಯಲ್ಲಿ ವಿವಾದಕ್ಕೆ ಕಾರಣವಾಗಿರುವ ಮುಡಾದ 14 ನಿವೇಶನಗಳನ್ನು ವಾಪಸ್ ಮಾಡಲು ನಿರ್ಧರಿಸಿದ್ದೇನೆ. ಇದು ನಾನು ನನ್ನ ಆತ್ಮ ಸಾಕ್ಷಿಯ ಕರೆಗೆ ಓಗೊಟ್ಟು ಪ್ರಜ್ಞಾಪೂರ್ವಕವಾಗಿ ಕೈಗೊಂಡಿರುವ ತೀರ್ಮಾನ.
ಪತಿ ಗೌರವ ಕಾಪಾಡಲು ಸಿಎಂ ಪತ್ನಿ ಭಾವನಾತ್ಮಕ ಮಾತು
ಮುಡಾ ಸೈಟು ಹಿಂದಿರುಗಿಸುವ ನಿರ್ಧಾರ ಮಾಡಿರುವ ಸಿಎಂ ಪತ್ನಿ ಇಷ್ಟೆಲ್ಲ ವಿವಾದವಾಗೋವರೆಗೂ ಯಾಕೆ ಸುಮ್ಮನಿದ್ದರು ಎಂದು ಪ್ರಶ್ನೆ ಕೂಡ ಸಾಮಾನ್ಯವಾಗಿ ಮೂಡುತ್ತೆ. ಇದಕ್ಕೂ ಉತ್ತರ ನೀಡಿರುವ ಸಿಎಂ ಪತ್ನಿ, ಭಾವನಾತ್ಮಕವಾಗಿ ಪತಿ ಸಿದ್ದರಾಮಯ್ಯ ಪರ ವಕಾಲತ್ತು ವಹಿಸಿದ್ದಾರೆ.
ಈ ಹಂತದಲ್ಲಿ ಇಂತಹ ನಿರ್ಧಾರಕ್ಕೆ ಏಕೆ ಬಂದೀರಿ? ಎಂದು ಯಾರಾದರೂ ಕೇಳಬಹುದು. ಆರೋಪ ಕೇಳಿ ಬಂದ ದಿನವೇ ನಾನು ಈ ನಿರ್ಧಾರ ಮಾಡಿದ್ದೆ. ಆದರೆ, ಈ ಮುಡಾ ನಿವೇಶನ ಹಂಚಿಕೆಯ ಆರೋಪವನ್ನು ರಾಜಕೀಯ ದುರುದ್ದೇಶದಿಂದ ಮಾಡಲಾಗಿದ್ದು, ಈ ಅನ್ಯಾಯದ ವಿರುದ್ಧ ಹೋರಾಡಬೇಕು. ಅವರ ಸಂಚಿಗೆ ನಾವು ಬಲಿಯಾಗಬಾರದು ಎಂದು ಕೆಲವು ಹಿತೈಷಿಗಳು ಹೇಳಿದ ಕಾರಣಕ್ಕೆ ನಿವೇಶನ ವಾಪಸು ಮಾಡಬೇಕೆಂಬ ನಿರ್ಧಾರವನ್ನು ಕೈ ಬಿಟ್ಟಿದ್ದೆ. ನನ್ನ ಈ ನಿರ್ಧಾರ ಅಚಲವಾಗಿದ್ದು, ಈ ನಿವೇಶನಗಳನ್ನು ವಾಪಸು ನೀಡುವುದರ ಜೊತೆಗೆ ಮುಡಾಕ್ಕೆ ಸಂಬಂಧಿಸಿದ ಎಲ್ಲಾ ಆರೋಪಗಳ ಬಗ್ಗೆ ಸಮಗ್ರ ತನಿಖೆ ಮಾಡಬೇಕೆಂದು ಆಗ್ರಹಿಸುತ್ತೇನೆ. ಕೊನೆಯದಾಗಿ, ಎಲ್ಲಾ ರಾಜಕೀಯ ಪಕ್ಷದ ನಾಯಕರು ಮತ್ತು ಬಂಧುಗಳಲ್ಲಿ ನನ್ನ ವಿನಮ್ರ ವಿನಂತಿ. ದಯವಿಟ್ಟು ರಾಜಕೀಯ ಕ್ಷೇತ್ರದಿಂದ ದೂರವಿದ್ದು, ತಮ್ಮ ಪಾಡಿಗೆ ತಾವಿರುವ ರಾಜಕೀಯ ಕುಟುಂಬದ ಹೆಣ್ಣು ಮಕ್ಕಳನ್ನು ರಾಜಕೀಯ ದ್ವೇಷ ಸಾಧನೆಗಾಗಿ ವಿವಾದದ ಕಣಕ್ಕೆ ಎಳೆದು ತಂದು ಅವರ ಘನತೆ, ಗೌರವಗಳಿಗೆ ಹಾನಿ ಮಾಡಬೇಡಿ.
ಪತ್ನಿಯ ನಿರ್ಧಾರವನ್ನು ಗೌರವಿಸಿದ ಸಿಎಂ ಸಿದ್ದರಾಮಯ್ಯ
14 ಸೈಟ್ಗಳು ಹಿಂದಿರುಗಿಸಿರುವುದಾಗಿ ತಿಳಿಸಿರುವ ಪತ್ನಿಯ ನಿರ್ಧಾರವನ್ನು ಸಿಎಂ ಸಿದ್ದರಾಮಯ್ಯ ಗೌರವಿಸುತ್ತೇನೆ ಎಂದು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಇದನ್ನೂ ಓದಿ: KRCL Recruitment; ವಿವಿಧ ಸರ್ಕಾರಿ ಹುದ್ದೆಗಳು.. ಸಂದರ್ಶನ ಮಾತ್ರ, ಪರೀಕ್ಷೆ ಇಲ್ಲ!
ಸಿಎಂ ಸಿದ್ದರಾಮಯ್ಯ ಟ್ವಿಟ್ನಲ್ಲಿ ಏನೇನಿದೆ?
ನನ್ನ ವಿರುದ್ಧ ನಡೆಯುತ್ತಿರುವ ರಾಜಕೀಯ ಷಡ್ಯಂತ್ರದಿಂದ ನೊಂದಿರುವ ನನ್ನ ಪತ್ನಿ ಈ ನಿವೇಶನಗಳನ್ನು ಹಿಂದಿರುಗಿಸುವ ನಿರ್ಧಾರ ಕೈಗೊಂಡು, ನನಗೂ ಆಶ್ಚರ್ಯ ಉಂಟು ಮಾಡಿದ್ದಾರೆ. ನನ್ನ 4 ದಶಕಗಳ ಸುದೀರ್ಘ ರಾಜಕಾರಣದಲ್ಲಿ ಎಂದೂ ಕೂಡಾ ಮಧ್ಯೆಪ್ರವೇಶಿಸದೆ ಕುಟುಂಬಕ್ಕಷ್ಟೆ ಸೀಮಿತವಾಗಿದ್ದ ನನ್ನ ಪತ್ನಿ ನನ್ನ ವಿರುದ್ಧದ ದ್ವೇಷದ ರಾಜಕಾರಣಕ್ಕೆ ಬಲಿಯಾಗಿ ಮಾನಸಿಕವಾಗಿ ಹಿಂಸೆ ಅನುಭವಿಸುವಂತಾಗಿರುವುದಕ್ಕೆ ನನಗೆ ವಿಷಾದ ಇದೆ. ಹೀಗಿದ್ದರೂ ನಿವೇಶನಗಳನ್ನು ಹಿಂದಿರುಗಿಸಿದ ನನ್ನ ಪತ್ನಿಯ ನಿರ್ಧಾರವನ್ನು ನಾನು ಗೌರವಿಸುತ್ತೇನೆ.
ಮುಡಾ ಭೂ ಸುಳಿಯಲ್ಲಿ ಸಿಲುಕಿರುವ ಪತಿಯನ್ನ ಪಾರು ಮಾಡಲು ಸಿಎಂ ಪತ್ನಿ ಇಷ್ಟೆಲ್ಲ ರಾದ್ಧಂತಕ್ಕೆ ಕಾರಣವಾಗಿ ಆ ಸೈಟ್ಗಳನ್ನು ಹಿಂದಿರುಗಿಸಿದ್ದಾರೆ. ಆದ್ರೆ ಈಗಾಗಲೇ ತನಿಖಾ ಹಂತಕ್ಕೆ ಬಂದಿರುವ ಕಾರಣ ಮುಡಾ ಪ್ರಕರಣ ಮತ್ತಷ್ಟು ಕುತೂಹಲ ಮೂಡಿಸಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ