/newsfirstlive-kannada/media/media_files/2026/02/21/chandru-lamani-2026-02-21-15-22-22.jpg)
ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸುವ ಸುದ್ದಿಯೊಂದು ಗದಗದಿಂದ ಹೊರಬಿದ್ದಿದೆ. ಗುತ್ತಿಗೆದಾರರೊಬ್ಬರಿಂದ ಲಂಚ ಸ್ವೀಕರಿಸುವಾಗ ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ (Chandru Lamani) ಅವರು ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ಘಟನೆಯ ವಿವರ
ಶಾಸಕ ಚಂದ್ರು ಲಮಾಣಿ ಅವರು ಗುತ್ತಿಗೆದಾರರೊಬ್ಬರಿಂದ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಇಂದು (ಶನಿವಾರ) ಲಕ್ಷ್ಮೇಶ್ವರದಲ್ಲಿರುವ ತಮ್ಮ ಕಚೇರಿಯಲ್ಲಿ ಗುತ್ತಿಗೆದಾರನಿಂದ ಬರೋಬ್ಬರಿ 5 ಲಕ್ಷ ರೂಪಾಯಿ ಹಣವನ್ನು ಸ್ವೀಕರಿಸುತ್ತಿದ್ದ ವೇಳೆ, ಹೊಂಚು ಹಾಕಿ ಕುಳಿತಿದ್ದ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಹಣ ಪಡೆಯುವಾಗಲೇ ಶಾಸಕರು ರೆಡ್ ಹ್ಯಾಂಡ್ ಆಗಿ (Red Handed) ಸಿಕ್ಕಿಬಿದ್ದಿದ್ದಾರೆ.
ಆಸ್ಪತ್ರೆ, ಮನೆ ಮೇಲೂ ದಾಳಿ
ಲೋಕಾಯುಕ್ತ ಎಸ್‌ಪಿ ಸಿದ್ದಲಿಂಗಪ್ಪ ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಶಾಸಕರಿಗೆ ಸೇರಿದ ಲಕ್ಷ್ಮೇಶ್ವರದ ಬಾಲಾಜಿ ಆಸ್ಪತ್ರೆ (Balaji Hospital), ಅವರ ನಿವಾಸ ಮತ್ತು ಕಚೇರಿಯ ಮೇಲೆ ಏಕಕಾಲದಲ್ಲಿ ದಾಳಿ ನಡೆಸಲಾಗಿದ್ದು, ಮಹತ್ವದ ದಾಖಲೆಗಳನ್ನು ಪರಿಶೀಲನೆ ಮಾಡಲಾಗುತ್ತಿದೆ.
ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಚಂದ್ರು ಲಮಾಣಿ ಅವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇವರ ಜೊತೆಗೆ ಶಾಸಕರ ಆಪ್ತ ಸಹಾಯಕ (PA) ಮಂಜುನಾಥ್ ಮತ್ತು ಗುರು ಎಂಬುವವರನ್ನು ಕೂಡ ವಶಕ್ಕೆ ಪಡೆಯಲಾಗಿದೆ. ಸದ್ಯ ಹಣದ ವ್ಯವಹಾರ ಮತ್ತು ಕಾಮಗಾರಿಯ ಬಗ್ಗೆ ಲೋಕಾಯುಕ್ತ ಅಧಿಕಾರಿಗಳು ತೀವ್ರ ವಿಚಾರಣೆ (Interrogation) ನಡೆಸುತ್ತಿದ್ದಾರೆ. ಬಿಜೆಪಿ ಶಾಸಕರೇ ಲಂಚ ಪಡೆಯುವಾಗ ಸಿಕ್ಕಿಬಿದ್ದಿರುವುದು ಜಿಲ್ಲಾ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ.
ಇದನ್ನೂ ಓದಿ: ಪಾಂಡ್ಯ ಹೊಡೆತಕ್ಕೆ ಮೈದಾನದಲ್ಲೇ ಕುಸಿದುಬಿದ್ದ ಟೀಂ ಇಂಡಿಯಾ ಸ್ಟಾರ್​ ಬೌಲರ್​..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us