/newsfirstlive-kannada/media/media_files/2025/11/19/narendra-swamy-1-2025-11-19-21-47-30.jpg)
ಬೆಂಗಳೂರು: ಬಹುತೇಕ ಜಿಲ್ಲೆಗಳಲ್ಲಿ ತ್ಯಾಜ್ಯ ನೀರು ನಿರ್ವಹಣಾ ಘಟಕ (STP)ಗಳು ಸರಿಯಾಗಿ ಕೆಲಸ ಮಾಡದೆ ಕೊಳಚೆ ನೀರು ನದಿ ಸೇರುತ್ತಿವೆ. ಇದನ್ನು ತಡೆಯಲು ಕ್ರಮ ಕೈಗೊಳ್ಳುವಂತೆ ಎಲ್ಲಾ ಜಿಲ್ಲಾಡಳಿತ ಮತ್ತು ಸ್ಥಳೀಯ ಸಂಸ್ಥೆಗಳಿಗೆ ಸೂಚನೆ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾದ ಪಿಎಂ ನರೇಂದ್ರಸ್ವಾಮಿ ಮನವಿ ಮಾಡಿದರು.
ಬೆಂಗಳೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವದ ಸಮಾರೋಪ ಸಮಾರಂಭದಲ್ಲಿ ಪ್ರಸ್ತಾವಿಕ ಭಾಷಣ ಮಾಡಿದ ನರೇಂದ್ರಸ್ವಾಮಿ ಅವರು, ಜಲ ಮಾಲಿನ್ಯ ತಡೆಯಲು ಮಂಡಳಿಯು ರಾಜ್ಯದಲ್ಲಿರುವ ನದಿ ನೀರು ಮಾಪನ ಕೇಂದ್ರಗಳನ್ನು ಹೆಚ್ಚಿಸಲು ನಿರ್ಧರಿಸಿದೆ ಎಂದು ತಿಳಿಸಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತ್ಯಾಜ್ಯದಿಂದ ರಸ್ತೆ ನಿರ್ಮಾಣ ಮಾಡುವ ಆವಿಷ್ಕಾರವನ್ನು ಮಾಡಲಾಗಿದೆ. ಇದೇ ರೀತಿ ಎಲ್ಲಾ ಜಿಲ್ಲೆಗಳಲ್ಲೂ ತ್ಯಾಜ್ಯವನ್ನು ಸಮರ್ಪಕವಾಗಿ ಮರುಬಳಕೆ ಆಗುವಂತೆ ಕ್ರಮ ಕೈಗೊಳ್ಳಲು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದರು.
ದಾವಣಗೆರೆ ಜಿಲ್ಲೆಯಲ್ಲಿ ಗೃಹ ಬಳಕೆಯ ಪ್ಲಾಸ್ಟಿಕ್ ತ್ಯಾಜ್ಯವನ್ನು ಸಂಗ್ರಹಿಸಿ, ಸಂಸ್ಕರಿಸಲಾಗುತ್ತಿದೆ. ಇದು ರಾಜ್ಯಕ್ಕೆ ಮಾದರಿಯಾಗಬೇಕು. ಎಲ್ಲಾ ಜಿಲ್ಲೆಗಳೂ ಇದೇ ರೀತಿ ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಮಾಡಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಬೇಕೆಂದು ನರೇಂದ್ರಸ್ವಾಮಿ ಅವರು ಸಿಎಂಗೆ ಕೇಳಿಕೊಂಡರು. ಅಲ್ಲದೆ ತ್ಯಾಜ್ಯ ಕಡಿಮೆ ಮಾಡಿ, ಪುನರ್ ಬಳಕೆ ಹೆಚ್ಚಿಸುವುದಕ್ಕೆ ಪೂರಕವಾಗಿ ವರ್ತುಲ ಅರ್ಥವ್ಯವಸ್ಥೆ ಮತ್ತು ಸುಸ್ಥಿರತೆ ಎಂಬ ವಿಚಾರ ಸಂಕಿರಣದಲ್ಲಿ ತಜ್ಞರು ನೀಡಿದ ಸಲಹೆಯನ್ನು ಆಧರಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಹೇಳಿದರು.
/filters:format(webp)/newsfirstlive-kannada/media/media_files/2025/11/19/narendra-swamy-2-2025-11-19-21-47-55.jpg)
ಪರಿಸರ ಸಂರಕ್ಷಣೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು, ಮಾಲಿನ್ಯ ನಿಯಂತ್ರಣ ಮಂಡಳಿಯನ್ನು ಹಳ್ಖಿ ಹಳ್ಳಿಗೆ ಕೊಂಡೊಯ್ಯುವುದು ಮತ್ತು ಮಂಡಳಿ ಸ್ಥಾಪನೆಯಾಗಲು ಕಾರಣಕರ್ತರಾದ ಶ್ರೀಮತಿ ಇಂದಿರಾ ಗಾಂಧಿ ಅವರನ್ನು ಸ್ಮರಿಸುವುದು ಸುವರ್ಣ ಮಹೋತ್ಸವದ ಉದ್ದೇಶವಾಗಿದೆ. ಇದೇ ಕಾರಣಕ್ಕೆ ಬೆಂಗಳೂರಿನಲ್ಲಿ ಮಾತ್ರವೇ ಸುವರ್ಣ ಮಹೋತ್ಸವ ಮಾಡದೆ ರಾಜ್ಯದ 25 ಜಿಲ್ಲೆಗಳನ್ನು ಒಳಗೊಂಡು 14 ಕಡೆ ಕಾರ್ಯಕ್ರಮಗಳನ್ನು ಮಾಡಲಾಗಿದೆ. ಇಂದಿರಾ ಗಾಂಧಿ ಅವರ ಜನ್ಮದಿನವಾದ ಇಂದು (ನ. 19) ಬೆಂಗಳೂರಿನಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಸಹಯೋಗದೊಂದಿಗೆ ಬೆಂಗಳೂರಿನಲ್ಲಿ ಸಮಾರೋಪ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಸಾಲು ಮರದ ತಿಮ್ಮಕ್ಕನ ಹೆಸರಿನಲ್ಲಿ ಪರಿಸರ ಪ್ರಶಸ್ತಿ
ಇತ್ತೀಚೆಗೆ ತೀರಿಕೊಂಡ ಪದ್ಮಶ್ರೀ ಸಾಲುಮರದ ತಿಮ್ಮಕ್ಕನ ಹೆಸರಿನಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ದತ್ತಿ ನಿಧಿ ಸರ್ಕಾರದ ಅನುಮೋದನೆಯೊಂದಿಗೆ ಪ್ರತೀ ವರ್ಷ ಪರಿಸರ ಸಂರಕ್ಷಣೆ ಮಾಡುವ ಸಾಧಕರಿಗೆ ಪ್ರಶಸ್ತಿ ನೀಡಬೇಕೆಂದು ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾದ ಪಿಎಂ ನರೇಂದ್ರಸ್ವಾಮಿ ಸ್ವಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದರು. ಬಳಿಕ ಸಿದ್ದರಾಮಯ್ಯ ಅನುಮೋದನೆ ನೀಡಿದರು.
1972ರಲ್ಲಿ ವಿಶ್ವಸಂಸ್ಥೆಯ ಸ್ಟಾಕ್‌ಹೋಮ್ ಸಮ್ಮೇಳನ ಉದ್ದೇಶಿಸಿ ಮಾತನಾಡಿದ ಇಂದಿರಾ ಗಾಂಧಿ ಮಾಲಿನ್ಯ ನಿಯಂತ್ರಣ ಮಂಡಳಿಗಳನ್ನು ಸ್ಥಾಪನೆ ಮಾಡಿರುವುದು ಮಾತ್ರವಲ್ಲ, ಪರಿಸರ ಸಂರಕ್ಷಣೆ ಮತ್ತು ಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಪಟ್ಟಂತೆ ಹಲವು ಕಾಯಿದೆಗಳನ್ನು ಜಾರಿಗೆ ತಂದರು. 1972ರಲ್ಲಿ ರಾಷ್ಟ್ರೀಯ ಪರಿಸರ ಯೋಜನೆ ಮತ್ತು ಸಮನ್ವಯ ಸಮಿತಿ ರಚಿಸಿದರು. ಅದೇ ವರ್ಷ ಅಳಿವಿನಂಚಿನಲ್ಲಿರುವ ಪ್ರಾಣಿ-ಪಕ್ಷಿಗಳ ಪ್ರಭೇದಗಳನ್ನು ರಕ್ಷಿಸಲು ವನ್ಯಜೀವಿ ಸಂರಕ್ಷಣಾ ಕಾಯ್ದೆ - 1972 ಅನ್ನು ಜಾರಿಗೆ ತಂದರು. 1973ರಲ್ಲಿ ಅಳಿವಿನಂಚಿನಲ್ಲಿರುವ ಹುಲಿಗಳನ್ನು ಮತ್ತು ಅವುಗಳ ಆವಾಸಸ್ಥಾನಗಳನ್ನು ರಕ್ಷಿಸಲು ಪ್ರಾಜೆಕ್ಟ್ ಟೈಗರ್ ಎಂಬ ವನ್ಯಜೀವಿ ಸಂರಕ್ಷಣಾ ಯೋಜನೆಯನ್ನು ರೂಪಿಸಿದರು. 1974ರಲ್ಲಿ ಜಲ ಮಾಲಿನ್ಯ ನಿಯಂತ್ರಣ ಕಾಯ್ದೆಯನ್ನು ಜಾರಿಗೆ ತಂದರು. ಅದೇ ವರ್ಷ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅಧೀನದಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿಗಳನ್ನು ಸ್ಥಾಪಿಸಿದರು. 1981ರಲ್ಲಿ ವಾಯು (ಮಾಲಿನ್ಯ ತಡೆ ಮತ್ತು ನಿಯಂತ್ರಣ) ಕಾಯ್ದೆ ಜಾರಿಗೆ ತಂದರು. ಸುವರ್ಣ ಮಹೋತ್ಸವದ ವೇಳೆ ಈ ಕಾಯಿದೆಗಳ ಬಗ್ಗೆ ಜನರಿಗೆ ತಿಳಿಸಲಾಗುತ್ತಿದೆ ಎಂದು ಹೇಳಿದರು.
ಇದಲ್ಲದೆ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರು 1986ರಲ್ಲಿ ಪರಿಸರ ಸಂರಕ್ಷಣೆ ಕಾಯ್ದೆ ಮತ್ತು 1989ರಲ್ಲಿ ರಾಷ್ಟ್ರೀಯ ಅರಣ್ಯ ನೀತಿ ಜಾರಿಗೆ ತಂದರು. 2005ರಲ್ಲಿ ಯುಪಿಎ ಅಧ್ಯಕ್ಷೆಯಾಗಿದ್ದ ಸೋನಿಯಾ ಗಾಂಧಿ ಅವರ ಒತ್ತಾಸೆಯಿಂದಾಗಿ ಅರಣ್ಯ ಹಕ್ಕು ಕಾಯ್ದೆ ಮತ್ತು 2011ರಲ್ಲಿ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಸ್ಥಾಪನೆ ಮಾಡಲಾಯಿತು. ಅವರನ್ನೂ ಸ್ಮರಿಸಿಕೊಳ್ಳಬೇಕಾಗಿದೆ ಎಂದು ಹೇಳಿದರು.
ಶಕ್ತಿ ಯೋಜನೆಯಿಂದ ಮಾಲಿನ್ಯ ನಿಯಂತ್ರಣ
ಸುವರ್ಣ ಮಹೋತ್ಸವದ ಅಂಗವಾಗಿ ರಾಜ್ಯದ ಪ್ರತಿ ವಿಧಾನಸಭಾ ಕ್ಷೇತ್ರ ಮಟ್ಟದಲ್ಲೂ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಹತ್ತು-ಹಲವು ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾಲ್ಗೊಳ್ಳುವಿಕೆ ಹೆಚ್ಚಿಸಲು ಅವರಿಗೆ ಚಿತ್ರಕಲೆ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು ಅದೇ ರೀತಿ ಪರಿಸರ ಸಂರಕ್ಷಣೆ ಮತ್ತು ಮಾಲಿನ್ಯ ನಿಯಂತ್ರಣ ಮಾಡುವುದರಲ್ಲಿ ಯುವಕರ ಪಾತ್ರ ಕೂಡ ಮಹತ್ವದ್ದು ಎಂದು ಪರಿಗಣಿಸಿ ‘ಪರಿಸರದ ಬಗ್ಗೆ ರಿಲ್ಸ್ ಮಾಡಿ ಬಹುಮಾನ ಗೆಲ್ಲಿ’ ಎಂಬ ಸ್ಪರ್ಧೆ ಆಯೋಜಿಸಲಾಗಿತ್ತು ಎಂದು ಹೇಳಿದರು.
ಪರಿಸರ ಸಂರಕ್ಷಣೆ ಮತ್ತು ಮಾಲಿನ್ಯ ನಿಯಂತ್ರಣಕ್ಕೆ ಕೆಲಸ ಮಾಡಿದ ಸಾಧಕರಿಗೆ ರಾಜ್ಯ ಮಟ್ಟದಲ್ಲಿ ಐವರಿಗೆ ಮತ್ತು ಜಿಲ್ಲಾ ಮಟ್ಟದಲ್ಲಿ ಐವರಿಗೆ 'ಇಂದಿರಾ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿ’ ನೀಡಲಾಗಿದೆಎಂದು ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಚಿವರಾದ ಈಶ್ವರ ಖಂಡ್ರೆ, ದಿನೇಶ್ ಗುಂಡೂರಾವ್, ಚಲುವರಾಯಸ್ವಾಮಿ, ಡಾ. ಎಂ.ಸಿ. ಸುಧಾಕರ್, ಶಾಸಕರಾದ ಡಾ. ಅಶ್ವಥ್ ನಾರಾಯಣ, ಪೊನ್ನಣ್ಣ, ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ, ನಸೀರ್ ಅಹಮದ್ ಮತ್ತಿತರರು ಉಪಸ್ಥಿತರಿದ್ದರು.
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us